ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ 198 ಮನೆಗಳಿಗೆ ಹಾನಿ
ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ.
ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ.8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, ಅಳ್ನಾವರ ತಾಲೂಕಿನಲ್ಲಿ 4, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 11, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ 7, ಕಲಘಟಗಿ ತಾಲೂಕಿನಲ್ಲಿ 45, ಕುಂದಗೋಳ ತಾಲೂಕಿನಲ್ಲಿ 26, ನವಲಗುಂದ ತಾಲೂಕಿನಲ್ಲಿ 10 ಮತ್ತು ಅಣ್ಣಿಗೇರಿ ತಾಲೂಕಿನಲ್ಲಿ 8 ಮನೆಗಳೂ ಸೇರಿದಂತೆ ಜಿಲ್ಲೆಯ 8 ತಾಲೂಕುಗಳಲ್ಲಿ ಸುಮಾರು 198 ಮನೆಗಳು ತೊಂದರೆಗೀಡಾಗಿವೆ.
ಪರಿಹಾರ ವಿತರಣೆಗೆ ಕ್ರಮ
ಈ ಎಲ್ಲ ಪ್ರಕರಣಗಳ ಕುರಿತು ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ತಹಶೀಲ್ದಾರ್‌ಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ತನಿಖಾ ತಂಡದಿಂದ ಪರಿಶೀಲನೆ ಕಾರ್ಯ ನಡೆದು, ಅರ್ಹ ಫಲಾನುಭವಿಗಳಿಗೆ ಪರಿಹಾರ ವಿತರಿಸುವಲ್ಲಿ ಸರ್ಕಾರದ ನಿಯಮಾವಳಿಗಳಂತೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.